Karnataka Politics: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ‘ನಿರ್ಣಯ’ ಕದನ; ಅಶೋಕ್ ಬಿಟ್ಟ ಅನುದಾನದ ಬಾಣ
Karnataka Politics: ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ರಾಜ್ಯಕ್ಕೆ ಬಂದಿದೆ. ರೈಲ್ವೆ, ಗ್ರಾಮೀಣಾಭಿವೃದ್ಧಿ, ವಿಮಾನ ನಿಲ್ದಾಣ, ಹೆದ್ದಾರಿ ಸೇರಿದಂತೆ ಅನೇಕ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಉತ್ತಮ ಅನುದಾನ ನೀಡಿದೆ. ಇದಕ್ಕಾಗಿ ಅಭಿನಂದನೆ ಸಲ್ಲಿಸಿ ನಿರ್ಣಯ ಮಂಡಿಸಲಾಗಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಈಗ ಅನುದಾನ ತಾರತಮ್ಯಕ್ಕೆ ಸಂಬಂಧಪಟ್ಟಂತೆ ಕದನ ಶುರುವಾಗಿದೆ. ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ ನಿರ್ಣಯಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದಿಂದ ಬಂದಂತಹ ಅನುದಾನದ ಲೆಕ್ಕ ಸಹಿತ ತನ್ನ “ನಿರ್ಣಯ”ವನ್ನು ಮಂಡಿಸಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಕಿವಿಮಾತನ್ನೂ ಹೇಳಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಬಿಜೆಪಿ ವತಿಯಿಂದ ನಿರ್ಣಯ ಮಂಡನೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok), ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅತಿ ಹೆಚ್ಚು ಅನುದಾನ ಬಂದಿದ್ದು, ಈ ಕುರಿತು ಅಭಿನಂದನೆ ಸಲ್ಲಿಸಿ ನಿರ್ಣಯ ಕೈಗೊಳ್ಳಲಾಗಿದೆ. ಜತೆಗೆ ಕೇಂದ್ರವನ್ನು ದೂಷಿಸುವ ಪ್ರವೃತ್ತಿಯನ್ನು ಕೈ ಬಿಡಬೇಕೆಂದು ಒತ್ತಾಯಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ರಾಜ್ಯಕ್ಕೆ ಬಂದಿದೆ. ರೈಲ್ವೆ, ಗ್ರಾಮೀಣಾಭಿವೃದ್ಧಿ, ವಿಮಾನ ನಿಲ್ದಾಣ, ಹೆದ್ದಾರಿ ಸೇರಿದಂತೆ ಅನೇಕ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಉತ್ತಮ ಅನುದಾನ ನೀಡಿದೆ. ಇದಕ್ಕಾಗಿ ಅಭಿನಂದನೆ ಸಲ್ಲಿಸಿ ನಿರ್ಣಯ ಮಂಡಿಸಲಾಗಿದೆ. ಸಂಸದ ಡಿ.ಕೆ.ಸುರೇಶ್ ಅವರು ದೇಶ ಒಡೆಯುವ ಮಾತನಾಡಿದ್ದು, ಅದನ್ನು ಮರೆಸಲು ರಾಜ್ಯ ಸರ್ಕಾರದಿಂದ ನಿರ್ಣಯ ಮಂಡಿಸಲಾಗಿದೆ. ಇಡೀ ದೇಶದಲ್ಲಿ ಖಂಡನೆ ಕೇಳಿಬಂದ ನಂತರ ಈ ನಾಟಕವಾಡಲಾಗಿದೆ. ಆದ್ದರಿಂದ ಕೇಂದ್ರ ಸರ್ಕಾರದ ನೀಡಿದ ಸಹಕಾರದ ಬಗ್ಗೆ ಬಿಜೆಪಿ ಮಂಡಿಸಿದ ನಿರ್ಣಯದಲ್ಲಿ ತಿಳಿಸಲಾಗಿದೆ ಎಂದು ಆರ್. ಅಶೋಕ್ ಹೇಳಿದರು.
First Published on Vistara News.

Comments
Post a Comment