Rajya Sabha Election: ಸಿಎಂ, ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ; ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ?
Rajya Sabha Election: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈಗ ಅವರು ಕಾಂಗ್ರೆಸ್ ಪಾಳೆಯದಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಕರೆತರುವಲ್ಲಿ, ಅವರ ಬೆಂಬಲ ಪಡೆಯುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯಸಭಾ ಚುನಾವಣೆ (Rajya Sabha Election) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ತಂತ್ರಗಾರಿಕೆ ಜೋರಾಗಿದೆ. ಬಹುಮತ ಇರುವ ಕಾಂಗ್ರೆಸ್ ಶತಾಯಗತಾಯ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಈ ನಡುವೆ ಭಾನುವಾರ ತಮ್ಮ ಪಕ್ಷದ ಶಾಸಕ ರಾಜವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನ ಕೈಪಡೆಗೆ ತಲೆಬಿಸಿ ತಂದೊಡ್ಡಿದೆ. ಹೀಗಾಗಿ ಗೆಲ್ಲಲು ಇನ್ನೊಂದು ಮತದ ಅವಶ್ಯಕತೆ ಇದೆ. ಈ ನಡುವೆ ಅಡ್ಡ ಮತದಾನದ ಭೀತಿ ಇರುವುದರಿಂದ ಪಕ್ಷೇತರ ಶಾಸಕರತ್ತ ಕೈಪಡೆ ಕಣ್ಣಿಟ್ಟಿದೆ. ಇದರ ಭಾಗವಾಗಿ ಈ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಅವರನ್ನು ತನ್ನತ್ತ ಸೆಳೆದುಕೊಂಡಿತೇ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ರೆಡ್ಡಿ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸೋಮವಾರ ಭೇಟಿ ಮಾಡಿರುವುದು ಇದನ್ನು ಪುಷ್ಟೀಕರಿಸುತ್ತದೆ.
ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ ಕೆಲಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ ಜತೆಗಿದ್ದರು.
ಈ ವರೆಗೂ ಜನಾರ್ದನ ರೆಡ್ಡಿ ಅವರು ಬಿಜೆಪಿ ಪರವಾಗಿಯೇ ಮಾತನಾಡುತ್ತಿದ್ದರು. ಅವರು ಬಿಜೆಪಿಗೆ ಇಲ್ಲವೇ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈಗ ಅವರು ಕಾಂಗ್ರೆಸ್ ಪಾಳೆಯದಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಕರೆತರುವಲ್ಲಿ, ಅವರ ಬೆಂಬಲ ಪಡೆಯುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
First Published on Vistara News.

Comments
Post a Comment